

ತಮಿಳುನಾಡು ಕರಾವಳಿಯತ್ತ ಧಾವಿಸುತ್ತಿರುವ ‘ನಿವಾರ್’ ಚಂಡಮಾರುತದ ಪರಿಣಾಮದಿಂದಾಗಿ ಕರ್ನಾಟಕದಲ್ಲೂ ಮುಂದಿನ 48 ಗಂಟೆಗಳ ಕಾಲ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಚೆನ್ನೈ: ತಮಿಳುನಾಡು ಕರಾವಳಿಯತ್ತ ಧಾವಿಸುತ್ತಿರುವ ‘ನಿವಾರ್’ ಚಂಡಮಾರುತದ ಪರಿಣಾಮದಿಂದಾಗಿ ಕರ್ನಾಟಕದಲ್ಲೂ ಮುಂದಿನ 48 ಗಂಟೆಗಳ ಕಾಲ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬಂಗಾಳಕೊಲ್ಲಿಯ ನೈಋತ್ಯ ಭಾಗದಲ್ಲಿ ವಾಯುಭಾರ ಕುಸಿತ ಉಂಟಾಗಿದ್ದು, ಪರಿಣಾಮ ಉಂಟಾಗಿರುವ ನಿವಾರ್ ಚಂಡಮಾರುತದ ಪರಿಣಾಮ ನವೆಂಬರ್ 25 ಮತ್ತು 26 ರಂದು ಎರಡು ದಿನಗಳ ಕಾಲ ರಾಜ್ಯದಲ್ಲಿ ಭಾರೀ ಮಳೆಯಾಗಲಿದೆ. ಕರ್ನಾಟಕದ ದಕ್ಷಿಣ ಒಳನಾಡಿನ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಕೋಲಾರ, ಮಂಡ್ಯ, ರಾಮನಗರ, ತುಮಕೂರು ಜಿಲ್ಲೆಗಳಲ್ಲಿ ಗುಡುಗು, ಸಿಡಿಲು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇರುವುದರಿಂದ ಮುನ್ನೆಚ್ಚರಿಕಾ ಕ್ರಮವಾಗಿ ಎರಡೂ ದಿನ ಈ ಭಾಗಗಳಲ್ಲಿ ‘ಯೆಲ್ಲೊ ಅಲರ್ಟ್’ ಘೋಷಿಸಲಾಗಿದೆ ಎಂದು ಹವಾಮಾನ ಇಲಾಖೆ ನಿರ್ದೇಶಕ ಸಿ.ಎಸ್.ಪಾಟೀಲ ತಿಳಿಸಿದರು.
ನವೆಂಬರ್ 25ರಂದು ಬೆಂಗಳೂರಿನಲ್ಲಿ ತೀವ್ರ ಮೋಡ ಕವಿದ ವಾತಾವರಣ ಇರಲಿದ್ದು, ಗುಡುಗು ಸಹಿತ ಮಳೆ ಸುರಿಯುವ ಸಾಧ್ಯತೆ ಇದೆ. ರಾತ್ರಿ ಕೂಡ ಮಳೆ ಸುರಿಯಬಹುದು. ಇನ್ನು ರಾಜ್ಯದ ಮಲೆನಾಡು ಮತ್ತು ಕರಾವಳಿ ಜಿಲ್ಲೆಗಳಲ್ಲಿ ಕೂಡ ಅಲ್ಲಲ್ಲಿ ಚದುರಿದಂತೆ ಸಾಧಾರಣ ಮಳೆಯ ಸಾಧ್ಯತೆ ಇದೆ. ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಅಲ್ಲಲ್ಲಿ ಹಗುರ ಮಳೆಯಾಗುವ ಸಾಧ್ಯತೆ ಇದೆ. (kpc)
