
ಸಿಂದಗಿ ಕ್ಷೇತ್ರದ ಹಿರಿಯ ಜೆಡಿಎಸ್ ಶಾಸಕ ಎಂ. ಸಿ. ಮನಗೂಳಿ ಬೆಂಗಳೂರಿನಲ್ಲಿ ನಿನ್ನೆ ರಾತ್ರಿ ನಿಧನರಾಗಿದ್ದಾರೆ. ಅವರಿಗೆ 85 ವರ್ಷ ವಯಸ್ಸಾಗಿತ್ತು.

ಬೆಂಗಳೂರು: ಸಿಂದಗಿ ಕ್ಷೇತ್ರದ ಹಿರಿಯ ಜೆಡಿಎಸ್ ಶಾಸಕ ಎಂ. ಸಿ. ಮನಗೂಳಿ ಬೆಂಗಳೂರಿನಲ್ಲಿ ನಿನ್ನೆ ರಾತ್ರಿ ನಿಧನರಾಗಿದ್ದಾರೆ. ಅವರಿಗೆ 85 ವರ್ಷ ವಯಸ್ಸಾಗಿತ್ತು.
15 ದಿನಗಳಿಂದ ತೀವ್ರ ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ ಅವರನ್ನು ಜನವರಿ 9 ರಂದು ಕಲಬುರಗಿಯಿಂದ ಬೆಂಗಳೂರಿಗೆ ಏರ್ ಲಿಫ್ಟ್ ಮಾಡಲಾಗಿತ್ತು. ಅಪೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತಿತ್ತು. ಆದರೆ, ಚಿಕಿತ್ಸೆ ಫಲಿಸದೆ ರಾತ್ರಿ ಒಂದು ಗಂಟೆ ಸುಮಾರಿಗೆ ಅವರು ಕೊನೆಯುಸಿರೆಳೆದಿದ್ದಾರೆ.
ಸಿಂದಗಿ ವಿಧಾನಸಭಾ ಕ್ಷೇತ್ರದ ಹಾಲಿ ಶಾಸಕರಾಗಿದ್ದ ಅವರು ಕುಮಾರಸ್ವಾಮಿ ನೇತೃತ್ವದ ಜೆಡಿಎಸ್ – ಕಾಂಗ್ರೆಸ್ ಮೈತ್ರಿ ಸರ್ಕಾರದಲ್ಲಿ ತೋಟಗಾರಿಕೆ ಸಚಿವರಾಗಿ ಸೇವೆ ಸಲ್ಲಿಸಿದ್ದರು. 1994ರಲ್ಲಿ ಮೊದಲ ಬಾರಿಗೆ ಸಿಂದಗಿ ಕ್ಷೇತ್ರದಿಂದ ಜನತಾದಳದ ಶಾಸಕರಾಗಿದ್ದ ಅವರು, ಗ್ರಾಮೀಣಾಭಿವೃದ್ಧಿ ಸಚಿವರೂ ಆಗಿದ್ದರು.
1994ರ ವಿಧಾನಸಭೆ ಚುನಾವಣೆ ಸೇರಿದಂತೆ 6 ಬಾರಿ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಿ, 1994 ಮತ್ತು 2018ರಲ್ಲಿ ಎರಡು ಬಾರಿ ವಿಜಯ ಸಾಧಿಸಿ, ಎರಡು ಬಾರಿ ಮಂತ್ರಿ ಆಗಿದ್ದರು. 4 ಬಾರಿ ಪರಾಭವಗೊಂಡಿದ್ದರು. ಪತ್ನಿ, ಓರ್ವ ಪುತ್ರಿ, ನಾಲ್ವರು ಪುತ್ರರು ಸೇರಿದಂತೆ ಅಪಾರ ಬಂಧು- ಬಳಗ ಅಭಿಮಾನಿಗಳನ್ನು ಅಗಲಿದ್ದಾರೆ.
ಎಂ. ಸಿ. ಮನಗೂಳಿ ಅವರ ನಿಧನಕ್ಕೆ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ, ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ, ಜೆಡಿಎಸ್ ವರಿಷ್ಠ ಹೆಚ್ . ಡಿ. ದೇವೇಗೌಡ ಮತ್ತಿತರ ಹಲವು ಗಣ್ಯರು ಸಂತಾಪ ಸೂಚಿಸಿದ್ದಾರೆ.




