

ಪ್ರಧಾಮಂತ್ರಿ ಆವಾಸ್ ಯೋಜನೆ(ಪಿಎಂಎವೈ), ಪ್ರಧಾನಮಂತ್ರಿ ಸ್ವನಿಧಿ ಮತ್ತು ಕರ್ನಾಟಕ ಕೈಗೆಟುಕುವ ವಸತಿ ಯೋಜನೆಗಳ ಅರ್ಹ ಫಲಾನುಭವಿಗಳಿಗೆ ತ್ವರಿತವಾಗಿ ಸಾಲ ಮಂಜೂರು ಮಾಡುವಂತೆ…

ಬೆಂಗಳೂರು: ಪ್ರಧಾಮಂತ್ರಿ ಆವಾಸ್ ಯೋಜನೆ(ಪಿಎಂಎವೈ), ಪ್ರಧಾನಮಂತ್ರಿ ಸ್ವನಿಧಿ ಮತ್ತು ಕರ್ನಾಟಕ ಕೈಗೆಟುಕುವ ವಸತಿ ಯೋಜನೆಗಳ ಅರ್ಹ ಫಲಾನುಭವಿಗಳಿಗೆ ತ್ವರಿತವಾಗಿ ಸಾಲ ಮಂಜೂರು ಮಾಡುವಂತೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಗುರುವಾರ ರಾಜ್ಯದ ವಿವಿಧ ಬ್ಯಾಂಕ್ ಗಳ ಮುಖ್ಯಸ್ಥರಿಗೆ ಸೂಚಿಸಿದ್ದಾರೆ.
ಇಂದು ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಪ್ರಧಾನ ಮಂತ್ರಿ ಆವಾಸ್ ಯೋಜನೆ ಮತ್ತು ಪ್ರಧಾನಮಂತ್ರಿ ಸ್ವ ನಿಧಿ ಯೋಜನೆಗಳ ಪ್ರಗತಿ ಕುರಿತು ಬ್ಯಾಂಕ್ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಸಿಎಂ, “ಫಲಾನುಭವಿಗಳಿಗೆ ಸಾಲ ಮಂಜೂರು ಮಾಡಲು ಬ್ಯಾಂಕುಗಳು ವಿಳಂಬ ಮಾಡುತ್ತಿರುವುದರಿಂದ ಕರ್ನಾಟಕ ಈ ಯೋಜನೆಗಳಲ್ಲಿ ಹೆಚ್ಚಿನ ಪ್ರಗತಿ ತೋರಿಸುತ್ತಿಲ್ಲ” ಎಂದರು.
ಪ್ರಧಾನ ಮಂತ್ರಿ ಆವಾಸ್ ಯೋಜನೆ ಮತ್ತು ಪ್ರಧಾನ ಮಂತ್ರಿ ಸ್ವನಿಧಿ ಯೋಜನೆಗಳು ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಬಡವರಿಗಾಗಿ ಜಾರಿಗೊಳಿಸಿರುವ ಮಹತ್ವಾಕಾಂಕ್ಷೆಯ ಯೋಜನೆಗಳು. ಇವುಗಳ ಅನುಷ್ಠಾನಕ್ಕೆ ಬ್ಯಾಂಕರುಗಳು ಆದ್ಯತೆ ನೀಡಬೇಕು ಎಂದು ಸಿಎಂ ಸೂಚಿಸಿದರು.
ಇತರ ರಾಜ್ಯಗಳಿಗೆ ಹೋಲಿಸಿದರೆ ಕರ್ನಾಟಕದಲ್ಲಿ ಈ ಎರಡೂ ಯೋಜನೆಗಳ ಪ್ರಗತಿ ಕುಂಠಿತವಾಗಿದೆ. ಈ ಯೋಜನೆಗಳಡಿ ಸಾಲ ಮಂಜೂರಾತಿ ವಿಳಂಬವಾಗುತ್ತಿರುವುದು ಗಮನಕ್ಕೆ ಬಂದಿದ್ದು, ಈ ಬಗ್ಗೆ ಆದ್ಯ ಗಮನ ಹರಿಸುವಂತೆ ಬ್ಯಾಂಕರುಗಳಿಗೆ ಮುಖ್ಯಮಂತ್ರಿಗಳು ತಿಳಿಸಿದರು. (kpc)
