

ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಿಂದ ಬಂದ ಹಣವನ್ನು ನಿರಾಕರಿಸಿರುವ ಶಿಕಾರಿಪುರ ಮೂಲದ ರೈತನೊಬ್ಬ, ಹಣದ ಬದಲಿಗೆ ಅಗತ್ಯ ವಸ್ತುಗಳ ಮೇಲಿನ ತೆರಿಗೆ ರದ್ದುಪಡಿಸುವಂತೆ ಕೋರಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರಿಗೆ ಪತ್ರ ಬರೆದಿದ್ದಾರೆ.

ಶಿವಮೊಗ್ಗ: ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಿಂದ ಬಂದ ಹಣವನ್ನು ನಿರಾಕರಿಸಿರುವ ಶಿಕಾರಿಪುರ ಮೂಲದ ರೈತನೊಬ್ಬ, ಹಣದ ಬದಲಿಗೆ ಅಗತ್ಯ ವಸ್ತುಗಳ ಮೇಲಿನ ತೆರಿಗೆಯನ್ನು ರದ್ದುಪಡಿಸುವಂತೆ ಕೋರಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರಿಗೆ ಪತ್ರ ಬರೆದಿದ್ದಾರೆ.
ಅಂಬರಗೊಪ್ಪ ಗ್ರಾಮದ ನಿವಾಸಿಯಾಗಿರುವ ಸಂದೇಶ್, ಬಿಬಿಎಂ ಪದವೀಧರನಾಗಿದ್ದು, 10 ಎಕರೆ ಭೂಮಿಯನ್ನು ಹೊಂದಿದ್ದಾರೆ.
ಪ್ರಧಾನಮಂತ್ರಿ ನರೇಂದ್ರ ಮೋದಿಯವರಿಗೆ ಪತ್ರ ಬರೆದಿರುವ ಸಂದೇಶ್, ಅಗತ್ಯ ವಸ್ತುಗಳ ಮೇಲಿನ ತೆರಿಗೆ ರದ್ದು ಪಡಿಸುವಂತೆ ಮನವಿ ಮಾಡಿಕೊಂಡಿದ್ದಾರೆ. ಅಲ್ಲದೆ, ಈ ಸಂಬಂಧ ಕೃಷಿ ಇಲಾಖೆಯ ಅಧಿಕಾರಿಗಳನ್ನು ಭೇಟಿ ಮಾಡಿ ಮನವಿ ಪತ್ರ ಸಲ್ಲಿಸಿದ್ದಾರೆ.
ಕೃಷಿಗೆ ಸಂಬಂಧಿಸಿದ ವಸ್ತುಗಳು, ಯಂತ್ರಗಳ ಮೇಲಿನ ಎಲ್ಲಾ ತೆರಿಗೆಗಳನ್ನು ಕೇಂದ್ರ ಸರ್ಕಾರ ರದ್ದುಪಡಿಸಬೇಕು. ಬೆಂಬಲ ಬೆಲೆಗಳು ಸಿಗದೆ ರೈತರು ಸಂಕಷ್ಟವನ್ನು ಅನುಭವಿಸುತ್ತಿದ್ದಾರೆ. ಲಾಭಕ್ಕಿಂತಲೂ ಖರ್ಚು ಹೆಚ್ಚಾಗಿ ಹೋಗಿದೆ. ದೇಶದಲ್ಲಿ ಇಂದು ರೈತರು ಸಂಕಷ್ಟವನ್ನು ಅನುಭವಿಸುತ್ತಿದ್ದಾರೆ. ಆರ್ಥಿಕ ಸಂಕಷ್ಟದಿಂದ ಆತ್ಮಹತ್ಯೆಗೆ ಶರಣಾಗುತ್ತಿದ್ದಾರೆಂದು ಸಂದೇಶ್ ಹೇಳಿದ್ದಾರೆ.
ಈ ಎಲ್ಲಾ ಬೆಳವಣಿಗೆ ಹಿನ್ನೆಲೆಯಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರ ನೀಡುತ್ತಿರುವ ಆರ್ಥಿಕ ಸಹಾಯವನ್ನು ನಾನು ನಿರಾಕರಿಸುತ್ತಿದ್ದೇನೆ. ನನ್ನ ಬ್ಯಾಂಕ್ ಖಾತೆಗೆ ಹಣವನ್ನು ಹಾಕದಂತೆ ಅಧಿಕಾರಿಗಳಿಗೆ ಸೂಚನೆ ನೀಡುವಂತೆ ಮನವಿ ಮಾಡಿಕೊಳ್ಳುತ್ತಿದ್ದೇನೆಂದು ಸಂದೇಶ್ ಮೋದಿಯವರಿಗೆ ಮನವಿ ಮಾಡಿಕೊಂಡಿದ್ದಾರೆ. (kpc)
