

ಮಾಜಿ ಶಾಸಕ ಮಧು ಬಂಗಾರಪ್ಪ ಜೆಡಿಎಸ್ ತೊರೆದು ಕಾಂಗ್ರೆಸ್ ಸೇರುತ್ತಿರುವ ಬೆನ್ನಲ್ಲೇ ಹಲವು ಜೆಡಿಎಸ್ ನಾಯಕರು ಕಾಂಗ್ರೆಸ್ ಸೇರುವ ಸಾಧ್ಯತೆಯಿದೆ ಎಂದು ಹೇಳಲಾಗುತ್ತಿದೆ.

ಶಿವಮೊಗ್ಗ: ಮಾಜಿ ಶಾಸಕ ಮಧು ಬಂಗಾರಪ್ಪ ಜೆಡಿಎಸ್ ತೊರೆದು ಕಾಂಗ್ರೆಸ್ ಸೇರುತ್ತಿರುವ ಬೆನ್ನಲ್ಲೇ ಹಲವು ಜೆಡಿಎಸ್ ನಾಯಕರು ಕಾಂಗ್ರೆಸ್ ಸೇರುವ ಸಾಧ್ಯತೆಯಿದೆ ಎಂದು ಹೇಳಲಾಗುತ್ತಿದೆ.
ಜಿಲ್ಲಾ ಮತ್ತು ತಾಲೂಕು ಪಂಚಾಯಿತಿ ಚುನಾವಣೆ ಹಿನ್ನೆಲೆಯಲ್ಲಿ ಡಿಸಿಸಿ ಬ್ಯಾಂಕ್ ಮಾಜಿ ಅಧ್ಯಕ್ಷ ಹಾಗೂ ಒಕ್ಕಲಿಗ ಮುಖಂಡ ಆರ್ ಎಂ ಮಂಜುನಾಥ ಗೌಡ ಶೀಘ್ರವೇ ಕಾಂಗ್ರೆಸ್ ಸೇರಲಿದ್ದಾರೆ.
2013 ಮತ್ತು 2018 ರ ವಿಧಾನ ಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ನಾಯಕ ಕಿಮ್ಮನೆ ರತ್ನಾಕರ್ ವಿರುದ್ಧ ಮಂಜುನಾಥ ಗೌಡ ಸ್ಪರ್ಧಿಸಿದ್ದರು. ಶುಕ್ರವಾರ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರನ್ನು ಭೇಟಿ ಮಾಡಿ ಪಕ್ಷ ಸೇರುವ ಸಂಬಂಧ ಚರ್ಚೆ ನಡೆಸಿದ್ದಾರೆ.
ಜೆಡಿಎಸ್ ಪಕ್ಷದಿಂದ ತಮ್ಮ ರಾಜಕೀಯ ಜೀವನ ಆರಂಭಿಸಿದ್ದ ಮಂಜುನಾಥಗೌಡ ಕಾಂಗ್ರೆಸ್ ಮತ್ತು ಬಿಜೆಪಿ ಸೇರಿದ್ದರು. ಅದಾದ ನಂತರ ಯಡಿಯೂರಪ್ಪ ಸ್ಥಾಪಿಸಿದ್ದ ಕೆಜೆಪಿ ಸೇರ್ಪಡೆಗೊಂಡಿದ್ದರು. 2015 ರಲ್ಲಿ ಮತ್ತೆ ಕಾಂಗ್ರೆಸ್ ಸೇರಿದ್ದ ಗೌಡ ಮತ್ತೆ ಮಾತೃಪಕ್ಷ ಜೆಡಿಎಸ್ ಗೆ ವಾಪಾಸಾಗಿದ್ದರು. ಈಗ ಮೂರನೇ ಬಾರಿಗೆ ಕಾಂಗ್ರೆಸ್ ಗೆ ಸೇರುತ್ತಿದ್ದಾರೆ. (kpc)
