

ಕುವೆಂಪು ನಾಡಗೀತೆ ಅವಮಾನಿಸಿರುವ ಕರ್ನಾಟಕ ಪಠ್ಯಪುಸ್ತಕ ಪರಿಷ್ಕರಣೆ ಸಮಿತಿ ಅಧ್ಯಕ್ಷ ರೋಹಿತ್ ಚಕ್ರತೀರ್ಥ ಅವರನ್ನು ಪದಚ್ಯುತಗೊಳಿಸುವಂತೆ ಲೇಖಕರು, ರಾಜಕೀಯ ನಾಯಕರು ಹಾಗೂ ಸಾಹಿತಿಗಳಿಂದ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರ ಮೇಲೆ ಒತ್ತಡ ಹೆಚ್ಚಾಗುತ್ತಿದೆ ಎಂದು ತಿಳಿದುಬಂದಿದೆ.


ಬೆಂಗಳೂರು: ಕುವೆಂಪು ನಾಡಗೀತೆ ಅವಮಾನಿಸಿರುವ ಕರ್ನಾಟಕ ಪಠ್ಯಪುಸ್ತಕ ಪರಿಷ್ಕರಣೆ ಸಮಿತಿ ಅಧ್ಯಕ್ಷ ರೋಹಿತ್ ಚಕ್ರತೀರ್ಥ ಅವರನ್ನು ಪದಚ್ಯುತಗೊಳಿಸುವಂತೆ ಲೇಖಕರು, ರಾಜಕೀಯ ನಾಯಕರು ಹಾಗೂ ಸಾಹಿತಿಗಳಿಂದ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರ ಮೇಲೆ ಒತ್ತಡ ಹೆಚ್ಚಾಗುತ್ತಿದೆ ಎಂದು ತಿಳಿದುಬಂದಿದೆ.

ಆದಿಚುಂಚನಗಿರಿ ಮಠದ ಮುಖ್ಯಸ್ಥ ಶ್ರೀ ನಿರ್ಮಲಾನಂದನಾಥ ಸ್ವಾಮಿಗಳು ಬೊಮ್ಮಾಯಿ ಅವರಿಗೆ ಪತ್ರ ಬರೆದಿದ್ದು, ‘ರಾಷ್ಟ್ರಕವಿ’ ಕುವೆಂಪು ಅವರು ಬರೆದಿರುವ ನಾಡಗೀತೆಯನ್ನು ಅವಮಾನ ಮಾಡಿದ್ದವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ.
ಕುವೆಂಪು ಅವರು ಮೊದಲ ಜ್ಞಾನಪೀಠ ಪ್ರಶಸ್ತಿ ಪಡೆಯುವ ಮೂಲಕ ಕನ್ನಡ ಮತ್ತು ಕರ್ನಾಟಕಕ್ಕೆ ಕೀರ್ತಿ ತಂದಿದ್ದಾರೆ. ಸರ್ಕಾರ ಅವರಿಗೆ ಕರ್ನಾಟಕ ರತ್ನ ನೀಡಿ ಗೌರವಿಸುವುದರ ಜೊತೆಗೆ ಅವರ ಹೆಸರಿನಲ್ಲಿ ಪ್ರತಿಷ್ಠಾನವನ್ನು ಸ್ಥಾಪಿಸಿತು. ಆದರೆ, ಅವರನ್ನು ಅವಮಾನ ಮಾಡುತ್ತಿರುವ ವ್ಯಕ್ತಿಯ ವಿರುದ್ಧ ಕ್ರಮ ಕೈಗೊಳ್ಳುವ ಬದಲು ಜವಾಬ್ದಾರಿಯುತ ಹುದ್ದೆ ನೀಡಿದೆ ಎಂದು ಪತ್ರದಲ್ಲಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಈ ನಡುವೆ ಕುಪ್ಪಳ್ಳಿಯ ರಾಷ್ಟ್ರಕವಿ ಕುವೆಂಪು ಪ್ರತಿಷ್ಠಾನದ ಅಧ್ಯಕ್ಷ ಸ್ಥಾನಕ್ಕೆ ನಾಡೋಜ ಹಂಪ ನಾಗರಾಜಯ್ಯ ಸೋಮವಾರ ರಾಜೀನಾಮೆ ನೀಡಿದ್ದಾರೆ.
ಈ ಬೆಳವಣಿಗೆಯಲ್ಲಿ ಸರಕಾರ ಮೂಕಪ್ರೇಕ್ಷಕರಾಗಿರುವುದು ಅಪಾಯಕಾರಿ ಬೆಳವಣಿಗೆಯಾಗಿದೆ, ನಾಡಗೀತೆಯನ್ನು ಅವಮಾನಿಸುವವರಿಗೆ ಸರಕಾರಿ ಸಮಿತಿಗಳ ಸದಸ್ಯರಾಗಿ ಅವಕಾಶ ಸಿಗುತ್ತದೆ ಎಂಬ ತಪ್ಪು ಸಂದೇಶ ರವಾನಿಸಲಾಗುತ್ತಿದೆ. “ವ್ಯಕ್ತಿಗಳ ಮೇಲಿನ ದಾಳಿಯನ್ನು ಸರ್ಕಾರ ಸಹಿಸುವುದಿಲ್ಲ ಎಂಬ ಭರವಸೆ ವ್ಯರ್ಥವಾಯಿತು, ಮತ್ತು ಕುವೆಂಪು ಮತ್ತು ನಾಡಗೀತೆಯ ಅವಮಾನವಾಗುತ್ತಿದ್ದರೂ ಮೌನವಾಗಿರುವುದು ನನ್ನಿಂದ ಸಾಧ್ಯವಿಲ್ಲ. ಹೀಗಾಗಿ ನಾನು ನನ್ನ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾನೆ. ಮುಖ್ಯಮಂತ್ರಿಗಳು ಈ ರಾಜೀನಾಮೆ ಪತ್ರವನ್ನು ಅಂಗೀಕರಿಸಬೇಕೆಂದು ಮನವಿ ಮಾಡಿಕೊಳ್ಳುತ್ತೇನೆಂದು ನಾಗರಾಜಯ್ಯ ಹೇಳಿದ್ದಾರೆ. (kpc)

