
ಜಿಲ್ಲಾ ಮತ್ತು ತಾಲ್ಲೂಕು ಪಂಚಾಯಿತಿಗಳಿಗೆ ಚುನಾವಣೆ ನಡೆಸಲು ಇಂದಿನಿಂದ ಹತ್ತು ದಿನಗಳಲ್ಲಿ ಕ್ಷೇತ್ರ ಪುನರ್ ವಿಂಗಡಣೆ ಅಧಿಸೂಚನೆ ಪ್ರಕಟಿಸಲು ರಾಜ್ಯ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್ ಮಂಗಳವಾರ ಗಡುವು ನೀಡಿದೆ.


ಬೆಂಗಳೂರು: ಜಿಲ್ಲಾ ಮತ್ತು ತಾಲ್ಲೂಕು ಪಂಚಾಯಿತಿಗಳಿಗೆ ಚುನಾವಣೆ ನಡೆಸಲು ಇಂದಿನಿಂದ ಹತ್ತು ದಿನಗಳಲ್ಲಿ ಕ್ಷೇತ್ರ ಪುನರ್ ವಿಂಗಡಣೆ ಅಧಿಸೂಚನೆ ಪ್ರಕಟಿಸಲು ರಾಜ್ಯ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್ ಮಂಗಳವಾರ ಗಡುವು ನೀಡಿದೆ.
ಜಿಲ್ಲಾ ಪಂಚಾಯಿತಿ ಹಾಗೂ ತಾಲ್ಲೂಕು ಪಂಚಾಯಿತಿ ಕ್ಷೇತ್ರಗಳ ಗಡಿ ನಿರ್ಣಯ ಮತ್ತು ಮೀಸಲಾತಿ ನಿಗದಿಪಡಿಸುವ ಅಧಿಕಾರವನ್ನು ರಾಜ್ಯ ಚುನಾವಣಾ ಆಯೋಗದಿಂದ ವಾಪಸ್ ಪಡೆದು ಕರ್ನಾಟಕ ಪಂಚಾಯತ್ ರಾಜ್ ಸೀಮಾ ನಿರ್ಣಯ ಆಯೋಗ ರಚಿಸಲು ‘ಕರ್ನಾಟಕ ಪಂಚಾಯತ್ ರಾಜ್ ಮತ್ತು ಗ್ರಾಮ ಸ್ವರಾಜ್ ಕಾಯಿದೆ’ಗೆ ತಿದ್ದುಪಡಿ ತಂದಿರುವುದನ್ನು ಪ್ರಶ್ನಿಸಿ ರಾಜ್ಯ ಚುನಾವಣಾ ಆಯೋಗ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆಯನ್ನು ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಾಲಚಂದ್ರ ವರಾಳೆ ಮತ್ತು ನ್ಯಾಯಮೂರ್ತಿ ಅಶೋಕ್ ಎಸ್.ಕಿಣಗಿ ಅವರ ನೇತೃತ್ವದ ವಿಭಾಗೀಯ ಪೀಠವು ನಡೆಸಿತು.
“ಅಡ್ವೊಕೇಟ್ ಜನರಲ್ ಅವರ ಹೇಳಿಕೆಯನ್ನು ಪರಿಗಣಿಸಿ, ಕ್ಷೇತ್ರ ಪುನರ್‌ವಿಂಗಡಣೆ ಅಧಿಸೂಚನೆ ಪ್ರಕಟಿಸಲು ರಾಜ್ಯ ಸರ್ಕಾರಕ್ಕೆ ಹತ್ತು ದಿನಗಳ ಕಾಲಾವಕಾಶ ನೀಡಲಾಗಿದೆ. ಅಧಿಸೂಚನೆ ಪ್ರಕಟಿಸಿದ ಬಳಿಕ, ವರದಿಯನ್ನು ಮುಂದಿನ ಕ್ರಮಕೈಗೊಳ್ಳಲು ರಾಜ್ಯ ಚುನಾವಣಾ ಆಯೋಗಕ್ಕೂ ಸಲ್ಲಿಸಲಾಗುವುದು ಎಂದು ಎಜಿ ತಿಳಿಸಿದ್ದಾರೆ. ಆನಂತರ, ಅಂತಿಮ ಅಧಿಸೂಚನೆಯ ಬಳಿಕ ಮೀಸಲಾತಿ ಅಧಿಸೂಚನೆಯನ್ನು ಸರ್ಕಾರ ಪ್ರಕಟಿಸಲಿದೆ. ಇದನ್ನೂ ಮುಂದಿನ ಕ್ರಮಕ್ಕಾಗಿ ಚುನಾವಣಾ ಆಯೋಗಕ್ಕೆ ರಾಜ್ಯ ಸರ್ಕಾರ ಸಲ್ಲಿಸಬೇಕು. ಈ ಆದೇಶ ಅನುಪಾಲನೆಗಾಗಿ ಎರಡು ವಾರಗಳ ಬಳಿಕ ಮತ್ತೆ ಪ್ರಕರಣದ ವಿಚಾರಣೆ ನಡೆಸಲಾಗುವುದು” ಎಂದು ಪೀಠ ಆದೇಶದಲ್ಲಿ ಹೇಳಿದೆ.
2022ರ ಡಿಸೆಂಬರ್ 14ರ ಆದೇಶಕ್ಕೆ ಅನುಗುಣವಾಗಿ ರೂ. ಐದು ಲಕ್ಷ ದಂಡ ಪಾವತಿಸಲು ಸರ್ಕಾರ ಒಪ್ಪಿದ್ದು, ಒಂದು ವಾರದಲ್ಲಿ ಪಾವತಿಸುವುದಾಗಿ ತಿಳಿಸಿದೆ ಎಂದು ಪೀಠವು ಆದೇಶದಲ್ಲಿ ಹೇಳಿದೆ.
ರಾಜ್ಯದ ಜಿಲ್ಲಾ ಮತ್ತು ತಾಲ್ಲೂಕು ಪಂಚಾಯಿತಿಗಳಿಗೆ ಚುನಾವಣೆ ನಡೆಸುವ ನಿಟ್ಟಿನಲ್ಲಿ ಕ್ಷೇತ್ರಗಳ ಪುನರ್ ವಿಂಗಡಣೆ ಮತ್ತು ಹಿಂದುಳಿದ ವರ್ಗಗಳೂ ಸೇರಿದಂತೆ ಇತರೆ ಸಮುದಾಯಗಳಿಗೆ ಕಾಲಮಿತಿಯಲ್ಲಿ ಮೀಸಲಾತಿ ನಿಗದಿಪಡಿಸಲು ವಿಫಲವಾಗಿರುವ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ₹5 ಲಕ್ಷ ದಂಡ ವಿಧಿಸಿತ್ತು. 2023ರ ಜನವರಿ 28ರ ಒಳಗೆ ಐದು ಲಕ್ಷ ರೂಪಾಯಿ ದಂಡದ ಮೊತ್ತವನ್ನು ಪಾವತಿಸುವುದನ್ನು ಆಧರಿಸಿ ರಾಜ್ಯ ಸರ್ಕಾರದ ಕಾಲಾವಕಾಶ ವಿಸ್ತರಣೆ ಮನವಿಯನ್ನು ಪರಿಗಣಿಸಲಾಗಿದೆ. ಈ ಪೈಕಿ ತಲಾ ಎರಡು ಲಕ್ಷ ರೂಪಾಯಿಗಳನ್ನು ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಮತ್ತು ಬೆಂಗಳೂರು ವಕೀಲರ ಸಂಘ ಹಾಗೂ ಒಂದು ಲಕ್ಷ ರೂಪಾಯಿಯನ್ನು ವಕೀಲರ ಗುಮಾಸ್ತರ ಕಲ್ಯಾಣ ನಿಧಿಯಲ್ಲಿ ಠೇವಣಿ ಇಡಬೇಕು ಎಂದು ಆದೇಶಿಸಿತ್ತು (kpc)
_______________________________________________________________
ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi
_______________________________________________________________
