

ಜೂನ್ 9 ರಂದು ನರೇಂದ್ರ ಮೋದಿ 3ನೇ ಬಾರಿ ಪ್ರಧಾನಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಈ ವೇಳೆ ನಿಯೋಜಿತ ಪ್ರಧಾನಿ ನರೇಂದ್ರ ಮೋದಿ ಅವರ ಬಗ್ಗೆ ನಟ ಪ್ರಕಾಶ್ ರೈ ಗೇಲಿ ಮಾಡಿದ್ದಾರೆ.

ನರೇಂದ್ರ ಮೋದಿ
ಬೆಂಗಳೂರು: ಜೂನ್ 9 ರಂದು ನರೇಂದ್ರ ಮೋದಿ 3ನೇ ಬಾರಿ ಪ್ರಧಾನಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಈ ವೇಳೆ ನಿಯೋಜಿತ ಪ್ರಧಾನಿ ನರೇಂದ್ರ ಮೋದಿ ಅವರ ಬಗ್ಗೆ ನಟ ಪ್ರಕಾಶ್ ರೈ ಗೇಲಿ ಮಾಡಿದ್ದಾರೆ.
ಈ ಸಂಬಂಧ ತಮ್ಮ ಎಕ್ಸ್ ಖಾತೆಯಲ್ಲಿ ಬರೆದುಕೊಂಡಿರುವ ಪ್ರಕಾಶ್ ರೈ, ವಿಕಲಾಂಗ ಚಕ್ರವರ್ತಿಯ ಸಾಮ್ರಾಜ್ಯದಲ್ಲಿ ಎಲ್ಲವೂ ಸರಿಯಿಲ್ಲ ಎಂದು ವ್ಯಂಗ್ಯವಾಡಿದ್ದಾರೆ. ಜೊತೆಗೆ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟದ (ಎನ್‌ಡಿಎ) ಸಭೆಯಲ್ಲಿ ಹಾಜರಾಗಿದ್ದ ಬಿಜೆಪಿ ನಾಯಕರ ಫೋಟೊವನ್ನು ಹಂಚಿಕೊಂಡಿರುವ ಪ್ರಕಾಶ್ ರಾಜ್, ‘ವಿಕಲಾಂಗ ಚಕ್ರವರ್ತಿಯ ಸಾಮ್ರಾಜ್ಯದಲ್ಲಿ ಎಲ್ಲವೂ ಸರಿಯಿಲ್ಲ. ಖಚಿತವಾಗಿ ಏನೋ ಪಿತೂರಿ ನಡೆಯುತ್ತಿದೆ. ಎಲ್ಲರಿಗೂ ವಾರಾಂತ್ಯದ ಶುಭಾಶಯಗಳು.. #justasking’ ಎಂದು ಪೋಸ್ಟ್ ಮಾಡಿದ್ದಾರೆ.
ಈಚೆಗೆ ನರೇಂದ್ರ ಮೋದಿ ಮತ್ತು ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದ ಪ್ರಕಾಶ ರಾಜ್, ‘ಕೇಂದ್ರದಲ್ಲಿ ಆತಂಕವಾದಿಗಳ ಸರ್ಕಾರ ಇದೆ. ಈಗ ಧರ್ಮ, ಜಾತಿ, ಮಂದಿರ ಹಾಗೂ ಮಾಂಗಲ್ಯದ ಬಗ್ಗೆ ಮಾತನಾಡುತ್ತಾರೆ. ಈ ಸರ್ವಾಧಿಕಾರಿಯನ್ನು ಅಧಿಕಾರದಿಂದ ಕೆಳಗಿಳಿಸಬೇಕು’ ಎಂದು ಹೇಳಿದ್ದರು.
