ಸಿದ್ದಾಪುರ: ಮಳೆಗಾಲ ಹಾಗೂ ಶೈಕ್ಷಣಿಕ ಅವಧಿ ಪ್ರಾರಂಭವಾಗಿರುವ ಹಿನ್ನೆಲೆಯಲ್ಲಿ ರೈತರು ಹಾಗೂ ವಿದ್ಯಾರ್ಥಿಗಳಿಗೆ ತೊಂದರೆಯಾಗದಂತೆ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳು ನೋಡಿಕೊಳ್ಳಬೇಕು ಎಂದು ಶಾಸಕ ಭೀಮಣ್ಣ ನಾಯ್ಕ ಸೂಚಿಸಿದರು.
ಇಲ್ಲಿಯ ಶಾಸಕರ ಕಾರ್ಯಾಲಯದಲ್ಲಿ ವಿವಿಧ ಇಲಾಖೆಯ ಅಧಿಕಾರಿಗಳೊಂದಿಗೆ ಮಾಹಿತಿ ಪಡೆದುಕೊಂಡು ಮಾತನಾಡಿ, ಪ್ರಸಕ್ತ ಸಾಲಿನಲ್ಲಿ ಉತ್ತಮ ಮಳೆಯಾಗಿದ್ದರಿಂದ ಈಗಾಗಲೇ ಕೃಷಿ ಚಟುವಟಿಕೆ ಆರಂಭಗೊಂಡಿವೆ. ರೈತರಿಗೆ ಬೇಕಾದ ಬೀಜ, ಗೊಬ್ಬರ, ತುತ್ತಾ, ಸುಣ್ಣ ಹಾಗೂ ಇತರ ಔಷಧಿಗಳನ್ನು ಸರಿಯಾಗಿ ನೀಡಬೇಕು. ಕೃಷಿಕರಿಗೆ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳು ಸೂಕ್ತ ಸಲಹೆ-ಸೂಚನೆ ನೀಡುವಂತೆ ಸೂಚಿಸಿದರು.
ಶೈಕ್ಷಣಿಕ ಚಟುವಟಿಕೆಗಳು ಆರಂಭಗೊಂಡ ಹಿನ್ನೆಲೆಯಲ್ಲಿ ಸರ್ಕಾರದ ವಸತಿ ನಿಲಯಗಳ ಪ್ರವೇಶ ಪ್ರಕ್ರೀಯೆ ಪ್ರಾರಂಭಿಸಿ ವಿದ್ಯಾರ್ಥಿಗಳಿಗೆ ಅನುಕೂಲ ಮಾಡಿಕೊಡುವಂತೆ ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಅಧಿಕಾರಿಗೆ ಸೂಚನೆ ನೀಡಿದರು.
ಈ ಸಂದರ್ಭದಲ್ಲಿ ವಿವಿಧ ಇಲಾಖೆಯ ಅಧಿಕಾರಿಗಳು ಹಾಗೂ ಸಾರ್ವಜನಿಕರು ಹಾಜರಿದ್ದರು.