


ಶಿವಮೊಗ್ಗ: ಗಣಪತಿ ಪ್ರತಿಷ್ಠಾಪನೆ ವೇಳೆ ಎರಡು ಗುಂಪುಗಳ ನಡುವೆ ಮಾರಾಮಾರಿ, ಕೆಲಕಾಲ ಆತಂಕದ ವಾತಾವರಣ ಸೃಷ್ಟಿ
ಭದ್ರಾವತಿ ತಾಲೂಕಿನ ಹೊಳೆಹೊನ್ನೂರು ಸಮೀಪದ ಅರಬಿಳಚಿ ಕ್ಯಾಂಪ್‌ನಲ್ಲಿ ಗಣಪತಿ ಪ್ರತಿಷ್ಠಾಪನೆ ವೇಳೆ ಎರಡು ಗುಂಪುಗಳ ಮಧ್ಯೆ ಗಲಾಟೆಯಾಗಿದೆ.


ಸಂಗ್ರಹ ಚಿತ್ರ

ಶಿವಮೊಗ್ಗ: ಗಣಪತಿ ಪ್ರತಿಷ್ಠಾಪನೆ ವೇಳೆ ಎರಡು ಗುಂಪುಗಳ ನಡುವೆ ಮಾರಾಮಾರಿ ನಡೆದ ಘಟನೆ ಶಿವಮೊಗ್ಗದಲ್ಲಿ ಶನಿವಾರ ನಡೆದಿದೆ.
ಭದ್ರಾವತಿ ತಾಲೂಕಿನ ಹೊಳೆಹೊನ್ನೂರು ಸಮೀಪದ ಅರಬಿಳಚಿ ಕ್ಯಾಂಪ್‌ನಲ್ಲಿ ಗಣಪತಿ ಪ್ರತಿಷ್ಠಾಪನೆ ವೇಳೆ ಎರಡು ಗುಂಪುಗಳ ಮಧ್ಯೆ ಗಲಾಟೆಯಾಗಿದ್ದು, ಪರಿಣಾಮ ಸ್ಥಳದಲ್ಲಿ ಕೆಲಕಾಲ ಆತಂಕದ ವಾತಾವರಣ ಸೃಷ್ಟಿಯಾಗಿತ್ತು.

ಗಲಾಟೆ ವೇಳೆ ಅರ್ಜುನ್ ಎಂಬ ಯುವಕನ ಮೇಲೆ ಹಲ್ಲೆ ಮಾಡಲಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಬಿಡಿಸಲು ಹೋದ ಪೋಲಿಸ್ ಪೇದೆಗಳಾದ ನಾಗರಾಜ್ ಮತ್ತು ವಿಶ್ವ ಎಂಬುವರ ಮೇಲೆ ಕಲ್ಲು ತೂರಾಟ ನಡೆಸಲಾಗಿದೆ ಎಂದು ವರದಿಗಳಿಂದ ತಿಳಿದುಬಂದಿದೆ.

ಗಲಾಟೆ ಬಳಿಕ ಸ್ಥಳಕ್ಕೆ ಎಎಸ್‌ಪಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸುಮಾರು 15 ರಿಂದ 20 ಜನರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆಂದು ವರದಿಗಳು ತಿಳಿಸಿವೆ.
ಗಣೇಶ ಮೂರ್ತಿ ತರುವಾಗ ಡೊಳ್ಳು ಬಾರಿಸುವವರ ವಿಚಾರದಲ್ಲಿ ಎರಡು ಗುಂಪುಗಳ ಮಧ್ಯ ಘರ್ಷಣೆ ನಡೆದಿದೆ ಎಂದು ಹೇಳಲಾಗುತ್ತಿದ್ದು, ಕೆಲಕಾಲ ಬಿಗುವಿನ ವಾತಾವರಣ ನಿರ್ಮಾಣವಾಗಿದೆ.
ಘಟನೆ ಬೆನ್ನಲ್ಲೇ ಸ್ಥಳದಲ್ಲಿ ಕೆಎಸ್ಆರ್ಪಿ ತುಕಡಿ ನಿಯೋಜನೆ ಮಾಡಲಾಗಿದ್ದು, ಪೊಲೀಸರು ಎರಡು ಗುಂಪನ್ನ ಚದುರಿಸಿ ಶಾಂತಿ ಕಾಪಾಡಿದ್ದಾರೆ. (ಕಪ್ರ.ಕಾ)
