
ಪಶ್ಚಿಮ ಘಟ್ಟಗಳ ಕುರಿತ ಕಸ್ತೂರಿ ರಂಗನ್ ವರದಿ ತಿರಸ್ಕರಿಸಲು ಸಂಪುಟ ಸಭೆಯಲ್ಲಿ ನಿರ್ಣಯ
ಡಾ.ಕೆ ಕಸ್ತೂರಿರಂಗನ್ ನೇತೃತ್ವದ ಉನ್ನತ ಮಟ್ಟದ ಕಾರ್ಯತಂಡದ ವರದಿಯ ಆಧಾರದ ಮೇಲೆ ಕೇಂದ್ರ ಸರ್ಕಾರ ಪಶ್ಚಿಮ ಘಟ್ಟಗಳನ್ನು ಪರಿಸರ ಸೂಕ್ಷ್ಮ ಪ್ರದೇಶ (ಇಎಸ್‌ಎ) ಎಂದು ಘೋಷಿಸುತ್ತದೆ. ಆಗ ಅಲ್ಲಿ ಮಾನವ ಹಸ್ತಕ್ಷೇಪ ಮಾಡುವ ಹಾಗೇ ಇಲ್ಲ.

ಸಂಗ್ರಹ ಚಿತ್ರPTI
ಬೆಂಗಳೂರು: ಪಶ್ಚಿಮ ಘಟ್ಟಗಳ ಕುರಿತ ಡಾ.ಕೆ ಕಸ್ತೂರಿರಂಗನ್ ವರದಿಯನ್ನು ಸಂಪೂರ್ಣವಾಗಿ ತಿರಸ್ಕರಿಸುವ ತನ್ನ ನಿರ್ಧಾರಕ್ಕೆ ಬದ್ಧವಾಗಿರಲು ರಾಜ್ಯ ಸಚಿವ ಸಂಪುಟ ನಿರ್ಧರಿಸಿದೆ.
ಡಾ.ಕೆ ಕಸ್ತೂರಿರಂಗನ್ ನೇತೃತ್ವದ ಉನ್ನತ ಮಟ್ಟದ ಕಾರ್ಯತಂಡದ ವರದಿಯ ಆಧಾರದ ಮೇಲೆ ಕೇಂದ್ರ ಸರ್ಕಾರ ಪಶ್ಚಿಮ ಘಟ್ಟಗಳನ್ನು ಪರಿಸರ ಸೂಕ್ಷ್ಮ ಪ್ರದೇಶ (ಇಎಸ್‌ಎ) ಎಂದು ಘೋಷಿಸುತ್ತದೆ. ಆಗ ಅಲ್ಲಿ ಮಾನವ ಹಸ್ತಕ್ಷೇಪ ಮಾಡುವ ಹಾಗೇ ಇಲ್ಲ. ಇಡೀ ಭೂ ಭಾಗ ರಾಜ್ಯದ ನಿಯಂತ್ರಣದಿಂದ ಕೇಂದ್ರದ ಸುಪರ್ದಿಗೆ ಹೋಗುತ್ತದೆ. ಈ ಬಗ್ಗೆ ಸಚಿವ ಸಂಪುಟವು ವಿಸ್ತೃತ ಚರ್ಚೆ ನಡೆಸಿದ್ದು ಕಸ್ತೂರಿರಂಗನ್ ವರದಿಯನ್ನು ಸಂಪೂರ್ಣವಾಗಿ ತಿರಸ್ಕರಿಸಲು ನಿರ್ಧರಿಸಲಾಗಿದೆ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್‌ಕೆ ಪಾಟೀಲ್ ತಿಳಿಸಿದರು.
ಇತ್ತೀಚೆಗೆ ಅರಣ್ಯ ಇಲಾಖೆ ಆಯೋಜಿಸಿದ್ದ ಸಮಾಲೋಚನೆಯಲ್ಲಿ, ಪಶ್ಚಿಮ ಘಟ್ಟಗಳ ಪರಿಸರ ಸೂಕ್ಷ್ಮ ಪ್ರದೇಶದ (ಇಎಸ್‌ಎ) ಹೊರಡಿಸಲಾಗಿದ್ದ ಆರನೇ ಕರಡು ಅಧಿಸೂಚನೆಗೆ ತೀವ್ರ ವಿರೋಧ ವ್ಯಕ್ತವಾಗಿತ್ತು. ಗುಜರಾತ್, ಮಹಾರಾಷ್ಟ್ರ, ಗೋವಾ, ಕರ್ನಾಟಕ, ಕೇರಳ ಮತ್ತು ತಮಿಳುನಾಡಿನಾದ್ಯಂತ ಪಶ್ಚಿಮ ಘಟ್ಟಗಳ 56,825.7 ಚದರ ಕಿಲೋಮೀಟರ್‌ಗಳನ್ನು ಪರಿಸರ ಸೂಕ್ಷ್ಮ ಎಂದು ಘೋಷಿಸಲು ಕೇಂದ್ರ ಪರಿಸರ ಸಚಿವಾಲಯವು 2014ರ ಮಾರ್ಚ್ ನಿಂದ ಆರು ಕರಡು ಅಧಿಸೂಚನೆಗಳನ್ನು ಹೊರಡಿಸಿದೆ. ಆದರೆ, ರಾಜ್ಯಗಳ ಆಕ್ಷೇಪದಿಂದಾಗಿ ಅಂತಿಮ ಅಧಿಸೂಚನೆ ಇನ್ನೂ ಬಾಕಿ ಉಳಿದಿದೆ. (ಕಪ್ರ.ಕಾ)
