ಕಾಂಗ್ರೆಸ್ ಸಿದ್ಧಾಂತ ಒಪ್ಪಿ, ಯಾರೇ ಬಂದರೂ ಅವರನ್ನು ಪಕ್ಷಕ್ಕೆ ಸೇರಿಸಿಕೊಳ್ಳಲಾಗುವುದು, ಸಿ.ಪಿ. ಯೋಗೇಶ್ವರ್ ಅವರೊಂದಿಗೆ ನಾನು ಮಾತನಾಡಿಲ್ಲ. ಕೆಪಿಸಿಸಿ ಅಧ್ಯಕ್ಷರು ಚನ್ನಪಟ್ಟಣ ವಲಯದವರಾಗಿದ್ದು, ಅವರು ಏನು ನಿರ್ಧಾರ ತೆಗೆದುಕೊಳ್ಳುತ್ತಾರೋ ನೋಡೋಣಾ.
ಸಿಪಿ ಯೋಗೇಶ್ವರ್, ಸಿಎಂ ಸಿದ್ದರಾಮಯ್ಯ ಸಾಂದರ್ಭಿಕ ಚಿತ್ರ
ಮೈಸೂರು: ನವೆಂಬರ್ 13 ರಂದು ನಡೆಯಲಿರುವ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಗೆ ಅಖಾಡ ರಂಗೇರಿದೆ. ವಿಧಾನಪರಿಷತ್ ಸದಸ್ಯತ್ವಕ್ಕೆ ನಿನ್ನೆ ರಾಜೀನಾಮೆ ಸಲ್ಲಿಸಿದ ಬಿಜೆಪಿಯ ಸಿ. ಪಿ. ಯೋಗೇಶ್ವರ್, ಕಾಂಗ್ರೆಸ್ ನಿಂದ ಚುನಾವಣೆಗೆ ಸ್ಪರ್ಧಿಸಲಿದ್ದಾರೆ ಎಂಬಂತಹ ಮಾತುಗಳು ಕೇಳಿಬರುತ್ತಿವೆ.
ಈ ಕುರಿತು ಮೈಸೂರಿನಲ್ಲಿಂದು ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಮುಖ್ಯಮಂತ್ರಿ, ಕಾಂಗ್ರೆಸ್ ಸಿದ್ಧಾಂತ ಒಪ್ಪಿ, ಯಾರೇ ಬಂದರೂ ಅವರನ್ನು ಪಕ್ಷಕ್ಕೆ ಸೇರಿಸಿಕೊಳ್ಳಲಾಗುವುದು, ಸಿ.ಪಿ. ಯೋಗೇಶ್ವರ್ ಅವರೊಂದಿಗೆ ನಾನು ಮಾತನಾಡಿಲ್ಲ. ಕೆಪಿಸಿಸಿ ಅಧ್ಯಕ್ಷರು ಚನ್ನಪಟ್ಟಣ ವಲಯದವರಾಗಿದ್ದು, ಅವರು ಏನು ನಿರ್ಧಾರ ತೆಗೆದುಕೊಳ್ಳುತ್ತಾರೋ ನೋಡೋಣಾ. ಸೂಕ್ತ ಅಭ್ಯರ್ಥಿಗೆ ಟಿಕೆಟ್ ನೀಡುವಂತೆ ಹೇಳಿದ್ದೇನೆ. ಅವರು ಚರ್ಚಿಸಿ ನಿರ್ಧಾರ ತೆಗೆದುಕೊಳ್ಳಲಿದ್ದಾರೆ ಎಂದು ಹೇಳಿದರು.
ಇನ್ನು ಸಿದ್ದರಾಮಯ್ಯ ಅವರ ಹೇಳಿಕೆಗೆ ಪ್ರತಿಕ್ರಿಯಿಸಿದ ಸಿ. ಪಿ. ಯೋಗೇಶ್ವರ್, ಅದು ಸಿದ್ದರಾಮಯ್ಯ ಅವರ ದೊಡ್ಡಗುಣ. ಮುಖ್ಯಮಂತ್ರಿಗಳು ಹಾಗೆ ಮಾತಾಡಿದ್ದಾರೆ ಅಂದ್ರೆ ಸಂತೋಷವಾಗುತ್ತಿದೆ. ನಾನು ಹಿಂದೆ ಕಾಂಗ್ರೆಸ್ ನಲ್ಲೇ ಇದ್ದವನು ಎಂದು ಹೇಳಿದರು.
ಈ ಮಧ್ಯೆ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜಿವಾಲಾ, ಬೆಂಗಳೂರಿಗೆ ಆಗಮಿಸಿದ್ದು, ಅವರ ಸಮ್ಮುಖದಲ್ಲಿ ಸಿ.ಪಿ. ಯೋಗೇಶ್ವರ್ ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರೆ ಎಂಬಂತಹ ಮಾತುಗಳು ಕೇಳಿಬರುತ್ತಿವೆ. ಆದರೆ, ಈ ಬಗ್ಗೆ ಯಾವುದೇ ಅಧಿಕೃತ ಮಾಹಿತಿ ತಿಳಿದುಬಂದಿಲ್ಲ.
ರಾಜ್ಯದಲ್ಲಿ ನಡೆಯಲಿರುವ ಮೂರು ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಗೆ ಆಡಳಿತಾರೂಢ ಕಾಂಗ್ರೆಸ್ ಎಲ್ಲಾ ಅಗತ್ಯ ಸಿದ್ಧತೆ ಮಾಡಿಕೊಂಡಿದ್ದು, ಸಂಡೂರು ಕ್ಷೇತ್ರದ ಟಿಕೆಟ್ ನ್ನು ಸಂಸದ ಇ. ತುಕಾರಾಂ ಅವರ ಪತ್ನಿ ಅನ್ನಪೂರ್ಣ ಅನ್ನಪೂರ್ಣ ಅವರಿಗೆ ನೀಡಲು ನಿರ್ಧರಿಸಲಾಗಿದೆ. ಶಿಗ್ಗಾವಿ ಮತ್ತು ಚನ್ನಪಟ್ಟಣ ಕ್ಷೇತ್ರಗಳ ಸಂಭಾವ್ಯ ಅಭ್ಯರ್ಥಿಗಳನ್ನು ಇಂದು ಸಂಜೆ ಪಕ್ಷದಿಂದ ನಿರ್ಧರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ತಿಳಿಸಿದರು.
ಉಪ ಚುನಾವಣೆಗೆ ನಾಮಪತ್ರ ಸಲ್ಲಿಕೆಗೆ ಅಕ್ಟೋಬರ್ 25 ಕೊನೆಯ ದಿನವಾಗಿದೆ. ಅಕ್ಟೋಬರ್ 30 ನಾಮಪತ್ರ ವಾಪಸ್ ಪಡೆಯಲು ಕಡೇಯ ದಿನವಾಗಿದೆ. (kp.c)