

ಸಿದ್ದಾಪುರ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಅಧ್ಯಕ್ಷತೆಯಲ್ಲಿ ಬೆಳಗಾವಿಯಲ್ಲಿ ಎಐಸಿಸಿ ಅಧಿವೇಶನ ನಡೆದು ನೂರು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಆಯೋಜಿಸಿರುವ ಶತಮಾನೋತ್ಸವ ಕಾರ್ಯಕ್ರಮಕ್ಕೆ ತಾಲೂಕಿನ ಕಾಂಗ್ರೆಸ್ ಮುಖಂಡರು, ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಪಾಲ್ಗೊಂಡು ಯಶಸ್ವಿಗೊಳಿಸುವಂತೆ ಶಿರಸಿ-ಸಿದ್ದಾಪುರ ಕ್ಷೇತ್ರದ ಶಾಸಕ ಭೀಮಣ್ಣ ನಾಯ್ಕ ಕರೆ ನೀಡಿದರು.

ಪಟ್ಟಣದ ಹೊಸೂರಿನ ಬಂಕೇಶ್ವರ ಸಭಾಭವನದಲ್ಲಿ ಶನಿವಾರ ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಮಹಾತ್ಮ ಗಾಂಧೀಜಿ ಅಧ್ಯಕ್ಷತೆಯಲ್ಲಿ ಬೆಳಗಾವಿಯಲ್ಲಿ ನಡೆದ ಅಖಿಲ ಭಾರತ ಕಾಂಗ್ರೆಸ್ ಸಮಿತಿ ಅಧಿವೇಶನ ನೂರು ವರ್ಷಗಳ ಹಿಂದೆ ಜರುಗಿತ್ತು. ಆ ಐತಿಹಾಸಿಕ ಅಧಿವೇಶನದ ಶತಮಾನೋತ್ಸವದ ಪ್ರಯುಕ್ತ ಗಾಂಧೀಜಿ ಅಧ್ಯಕ್ಷತೆಯಲ್ಲಿ ಅಧಿವೇಶನ ನಡೆದ ಸ್ಥಳದಲ್ಲೇ ಡಿಸೆಂಬರ 27 ರಂದು ಬೃಹತ್ ಸಮಾವೇಶ ಆಯೋಜಿಸಲಾಗಿದೆ. ಡಿಸೆಂಬರ 26 ರಂದು ಮೊದಲ ದಿನ ಎಐಸಿಸಿ ಕಾರ್ಯಕಾರಿಣಿ ಸಭೆ ಹಾಗೂ 27 ರಂದು ಬೃಹತ್ ಸಮಾವೇಶ ಆಯೋಜಿಸಲಾಗಿದೆ. ಪಕ್ಷದ ಪ್ರತಿಯೊಂದು ಘಟಕದ ಪದಾಧಿಕಾರಿಗಳು ಹಾಗೂ ಸದಸ್ಯರು ಉತ್ಸಾಹದಿಂದ ಪಾಲ್ಗೊಳ್ಳಬೇಕು. ಪಕ್ಷದ ಜವಾಬ್ದಾರಿ ವಹಿಸಿಕೊಂಡವರು ಅಧವೇಶನದಲ್ಲಿ ಭಾಗಿಯಾಗಿ ಅದರ ಮಹತ್ವ ತಿಳಿದುಕೊಳ್ಳಬೇಕು ಎಂದು ಕರೆ ನೀಡಿದರು.
ಈ ಸಂದರ್ಭದಲ್ಲಿ ತಾಲೂಕಾ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವಸಂತ ನಾಯ್ಕ, ತಾಲೂಕಾ ಗ್ಯಾರೆಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಕೆ.ಜಿ.ನಾಗರಾಜ, ಡಿಸಿಸಿ ಉಪಾಧ್ಯಕ್ಷ ವಿ.ಎನ್.ನಾಯ್ಕ, ಕೆಪಿಸಿಸಿ ಹಿಂದುಳಿದ ವರ್ಗಗಳ ವಿಭಾಗದ ಉಪಾಧ್ಯಕ್ಷ ಬಿ.ಆರ್.ನಾಯ್ಕ, ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಸೀಮಾ ಹೆಗಡೆ, ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಅಬ್ದುಲ್ಲಾ ಹೆರೂರ, ಪರಿಶಿಷ್ಟ ವಿಭಾಗದ ಅಧ್ಯಕ್ಷ ವೆಂಕಟ್ರಮಣ ಹಸ್ಲರ್, ಜಿಪಂ ಮಾಜಿ ಸದಸ್ಯೆ ಇಂದಿರಾ ನಾಯ್ಕ, ಪ್ರಮುಖರಾದ ನಾಸಿರ್ ಖಾನ್, ಸಿ.ಆರ್.ನಾಯ್ಕ, ವಿವೇಕ ಭಟ್, ನಟರಾಜ ಜಿಡ್ಡಿ, ಸೀತರಾಮ ಗೌಡ, ಮತ್ತಿತರರು ಉಪಸ್ಥಿತರಿದ್ದರು.
