


ಅರಣ್ಯವಾಸಿಗಳನ್ನು ಕಾಡಿನಿಂದ ಒಕ್ಕಲೆಬ್ಬಿಸಬಾರದು, ದೇವದಾಸಿ ಪದ್ಧತಿ ಕಂಡುಬಂದ್ರೆ ಕಠಿಣ ಕ್ರಮ: ಸಿಎಂ
ದೇವದಾಸಿ ಪದ್ಧತಿ ನಿಷೇಧ ಆಗಿದೆ. ಎಲ್ಲಿಯಾದರೂ ನಡೆದದ್ದು ಗಮನಕ್ಕೆ ಬಂದರೆ ಜಿಲ್ಲಾಧಿಕಾರಿ ಮತ್ತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ವಿರುದ್ಧ ಮುಲಾಜಿಲ್ಲದೆ ಕಠಿಣ ಕ್ರಮ ಕೈಗೊಳ್ಳಲಾಗುವುದು.

ಸಿಎಂ ಸಿದ್ದರಾಮಯ್ಯ ಸಾಂದರ್ಭಿಕ ಚಿತ್ರ
ಬೆಂಗಳೂರು: ಯಾವುದೇ ಕಾರಣಕ್ಕೂ ಅರಣ್ಯವಾಸಿಗಳನ್ನು ಕಾಡಿನಿಂದ ಹೊರಗೆ ಹಾಕಬಾರದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಗಳವಾರ ಅಧಿಕಾರಿಗಳಿಗೆ ಖಡನ್ ಸೂಚನೆ ನೀಡಿದ್ದಾರೆ.

ಇಂದು ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಅನುಸೂಚಿತ ಜಾತಿ, ಬುಡಕಟ್ಟುಗಳ ರಾಜ್ಯಮಟ್ಟದ ಜಾಗೃತ ಉಸ್ತುವಾರಿ ಮೇಲ್ವಿಚಾರಣಾ ಸಮಿತಿ ಜೊತೆ ಸಭೆ ನಡೆಸಿದ ಸಿಎಂ, ಅರಣ್ಯ ಹಕ್ಕು ಕಾಯ್ದೆ ಅಡಿಯಲ್ಲಿ ಹಕ್ಕು ಪತ್ರ ಸಮರ್ಪಕವಾಗಿ ನೀಡಬೇಕು. ಅರಣ್ಯವಾಸಿಗಳನ್ನು ಕಾಡಿನಿಂದ ಹೊರಗೆ ಹಾಕಬಾರದು ಎಂದು ಸೂಚನೆ ನೀಡಿದರು.
ಇನ್ನು ಜಾತಿ ದೌರ್ಜನ್ಯ ಪ್ರಕತಣಗಳಲ್ಲಿ 60 ದಿನಗಳ ಒಳಗೆ ಆರೋಪಪಟ್ಟಿ ದಾಖಲಿಸಲೇಬೇಕು. ಆರೋಪಿಗಳಿಗೆ ಸಲೀಸಾಗಿ ಬೇಲ್ ಸಿಕ್ಕರೆ ಅದು ನಿಮ್ಮ ದೌರ್ಬಲ್ಯ. ಹೀಗಾದರೆ ಜಾತಿ ದೌರ್ಜನ್ಯ ತಡೆಗಟ್ಟುವುದು ಸಾಧ್ಯವಿಲ್ಲ ಎಂದರು.



ಗಂಭೀರ ಪ್ರಕರಣಗಳಲ್ಲಿ ಆರೋಪಿಗಳಿಗೆ ಸಲೀಸಾಗಿ ಜಾಮೀನು ಸಿಕ್ಕರೆ, ಮೇಲ್ಮನವಿ ಹೋಗಿ ಜಾಮೀನು ರದ್ದುಪಡಿಸಿ ಆರೋಪಿಗೆ ಶಿಕ್ಷೆ ಕೊಡಿಸಿದ ಪ್ರಕರಣಗಳು ಎಷ್ಟಿವೆ ? ಈ ಬಗ್ಗೆ ವಿವರ ಕೊಡಿ ಎಂದು
ಸಿಎಂ ಸೂಚಿಸಿದರು.

ಯಾರಾದರೂ ನ್ಯಾಯಾಲಯದಿಂದ ತಡೆಯಾಜ್ಞೆ ತಂದರೆ ಅಡ್ವೊಕೇಟ್ ಜನರಲ್ ಜೊತೆ ಚರ್ಚಿಸಿ ತಡೆಯಾಜ್ಞೆ ತೆರವುಗೊಳಿಸಬೇಕು. ಜಾತಿ ದೌರ್ಜನ್ಯ ಪ್ರಕರಣಗಳಲ್ಲಿ ಶಿಕ್ಷೆಯ ಪ್ರಮಾಣ ಹಲವು ದಶಕಗಳಿಂದ ಶೇ. 3ಕ್ಕಿಂತ ಹೆಚ್ಚಾಗಿಲ್ಲ. ಈ ಕಾರಣಕ್ಕೂ ನಾನು ಡಿಸಿಎಆರ್ಇ ಸೆಲ್ಗಳಿಗೆ ಪೊಲೀಸ್ ಠಾಣೆ ಶಕ್ತಿ ನೀಡಿದ್ದಾಗಿದೆ. ಇನ್ನೂ ಶಿಕ್ಷೆ ಪ್ರಮಾಣ ಹೆಚ್ಚಾಗದಿದ್ದರೆ ಹೇಗೆ ಎಂದು ಸಿದ್ದರಾಮಯ್ಯ ಪ್ರಶ್ನಿಸಿದರು.
ದೇವದಾಸಿ ಪದ್ಧತಿ ಕಂಡುಬಂದ್ರೆ ಕಠಿಣ ಕ್ರಮ
ದೇವದಾಸಿ ಪದ್ಧತಿ ನಿಷೇಧ ಆಗಿದೆ. ಎಲ್ಲಿಯಾದರೂ ನಡೆದದ್ದು ಗಮನಕ್ಕೆ ಬಂದರೆ ಜಿಲ್ಲಾಧಿಕಾರಿ ಮತ್ತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ವಿರುದ್ಧ ಮುಲಾಜಿಲ್ಲದೆ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕಾರಿಗಳಿಗೆ ಎಚ್ವರಿಸಿದರು. (ಕಪ್ರ.ಕಾ)

