
ಕಾಂಗ್ರೆಸ್ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಪಕ್ಷದ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರ ನಿವಾಸಕ್ಕೆ ಆಗಮಿಸಿ ಅಭಿನಂದಿಸಿದರು.

ನವದೆಹಲಿ: ಕಾಂಗ್ರೆಸ್ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಪಕ್ಷದ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರ ನಿವಾಸಕ್ಕೆ ಆಗಮಿಸಿ ಅಭಿನಂದಿಸಿದರು.
ಸೋನಿಯಾ ಗಾಂಧಿ ಜೊತೆ ಆಗಮಿಸಿದ ಅವರ ಪುತ್ರಿ ಹಾಗೂ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಸಹ ನೂತನ ಅಧ್ಯಕ್ಷ ಖರ್ಗೆ ಅವರನ್ನು ಅಭಿನಂದಿಸಿದರು.
ಈ ವೇಳೆ ಮಲ್ಲಿಕಾರ್ಜುನ ಖರ್ಗೆ ಅವರ ಪತ್ನಿ ಹಾಗೂ ಅವರ ಪುತ್ರ ಪ್ರಿಯಾಂಕ್ ಖರ್ಗೆ ಸಹ ಇದ್ದರು.

ಎಐಸಿಸಿ ಅಧ್ಯಕ್ಷ ಸ್ಥಾನಕ್ಕೆ ಕಳೆದ ಸೋಮವಾರ ನಡೆದ ಚುನಾವಣೆಯ ಫಲಿತಾಂಶ ಇಂದು ಪ್ರಕಟವಾಗಿದ್ದು, ಮಲ್ಲಿಕಾರ್ಜುನ್ ಖರ್ಗೆ ಅವರು ಭರ್ಜರಿ ಗೆಲುವು ಸಾಧಿಸಿದ್ದಾರೆ. ಚಲಾವಣೆಯಾದ ಒಟ್ಟು 9385 ಮತಗಳಲ್ಲಿ ಮಲ್ಲಿಕಾರ್ಜುನ ಖರ್ಗೆ ಅವರು 7897 ಮತಗಳನ್ನು ಪಡೆದರೆ, ಪ್ರತಿ ಸ್ಪರ್ಧಿ ಸಂಸದ ಶಶಿ ತರೂರ್ 1,072 ಮತಗಳನ್ನು ಪಡೆದಿದ್ದಾರೆ. ಇನ್ನು 400ಕ್ಕೂ ಹೆಚ್ಚು ಮತಗಳು ತಿರಸ್ಕೃತಗೊಂಡಿವೆ.
ಈ ಮೂಲಕ 24 ವರ್ಷಗಳ ನಂತರ ಗಾಂಧಿಯೇತರರು ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.
