


ಡಿಸೆಂಬರ್ 26 ರಂದು ಬೆಳಗಾವಿಯಲ್ಲಿ ನಡೆಯಲಿರುವ ಕಾಂಗ್ರೆಸ್ ಕಾರ್ಯಕಾರಿ ಸಮಿತಿ (ಸಿಡಬ್ಲ್ಯುಸಿ) ಸಭೆಯ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಶನಿವಾರ ಇಲ್ಲಿ ತಮ್ಮ ಸಂಪುಟ ಸಹೋದ್ಯೋಗಿಗಳು ಮತ್ತು ಕಾಂಗ್ರೆಸ್ ಪದಾಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿದರು.


ಸಭೆ ನಡೆಸುತ್ತಿರುವ ಸಿಎಂ.
ಬೆಂಗಳೂರು: ಡಿಸೆಂಬರ್ 26 ರಂದು ಬೆಳಗಾವಿಯಲ್ಲಿ ನಡೆಯಲಿರುವ ಕಾಂಗ್ರೆಸ್ ಕಾರ್ಯಕಾರಿ ಸಮಿತಿ (ಸಿಡಬ್ಲ್ಯುಸಿ) ಸಭೆಯ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಶನಿವಾರ ಇಲ್ಲಿ ತಮ್ಮ ಸಂಪುಟ ಸಹೋದ್ಯೋಗಿಗಳು ಮತ್ತು ಕಾಂಗ್ರೆಸ್ ಪದಾಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿದರು.

ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಡಿಕೆ.ಶಿವಕುಮಾರ್ ಅವರು, ಮಹಾತ್ಮಾ ಗಾಂಧಿ ಅವರು ಅಧ್ಯಕ್ಷರಾಗಿದ್ದ ಬೆಳಗಾವಿ ಅಧಿವೇಶನದ ಶತಮಾನೋತ್ಸವ ಕಾರ್ಯಕ್ರಮ ಮಾಡುತ್ತಿದ್ದೇವೆ. ಇದೇ ತಿಂಗಳು 26 ಹಾಗೂ 27ರಂದು ನಡೆಯಲಿರುವ ಐತಿಹಾಸಿಕ ಕಾರ್ಯಕ್ರಮದ ಪೂರ್ವಭಾವಿ ಸಿದ್ಧತೆಗಳ ಕುರಿತು ಮುಖ್ಯಮಂತ್ರಿಗಳು ಇಂದು ಸಭೆ ನಡೆಸಿದ್ದಾರೆ, ಸುವರ್ಣಸೌಧದ ಆವರಣದಲ್ಲಿ ಮಹಾತ್ಮಾ ಗಾಂಧಿ ಅವರ ಪ್ರತಿಮೆ ಅನಾವರಣ ಕಾರ್ಯಕ್ರಮಕ್ಕೆ ಪಕ್ಷಾತೀತವಾಗಿ ಎಲ್ಲಾ ಶಾಸಕರಿಗೆ ಆಹ್ವಾನ ನೀಡಲಾಗುವುದು. ಡಿ.26ರಂದು ಮಧ್ಯಾಹ್ನ 3 ಗಂಟೆಗೆ ಕಾಂಗ್ರೆಸ್ ಪಕ್ಷದ ಕಾರ್ಯಕಾರಿ ಸಮಿತಿ ಸಭೆ ನಡೆಯಲಿದೆ. ಕಾರ್ಯಕಾರಿ ಸಮಿತಿಯ ಎಲ್ಲಾ ಸದಸ್ಯರು, ಎಲ್ಲಾ ಪ್ರದೇಶ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರುಗಳು, ಎಐಸಿಸಿ ಪ್ರಧಾನ ಕಾರ್ಯದರ್ಶಿಗಳು ಸೇರಿದಂತೆ ಎಲ್ಲಾ ಪದಾಧಿಕಾರಿಗಳು, 150 ಸಂಸದರು ಸಭೆಯಲ್ಲಿ ಭಾಗವಹಿಸುತ್ತಿದ್ದಾರೆಂದು ಹೇಳಿದರು.

ಡಿ.27ರಂದು ಬೆಳಗ್ಗೆ ಮಲ್ಲಿಕಾರ್ಜುನ ಖರ್ಗೆ ಅವರ ಅಧ್ಯಕ್ಷತೆಯಲ್ಲಿ ಬೃಹತ್ ಸಾರ್ವಜನಿಕ ಸಮಾವೇಶ ನಡೆಯಲಿದ್ದು, ಅನೇಕ ರಾಷ್ಟ್ರೀಯ ನಾಯಕರು ಮಾತನಾಡಲಿದ್ದಾರೆ. ರಾಜ್ಯದ ಮೂಲೆ ಮೂಲೆಗಳಿಂದ ಕಾರ್ಯಕರ್ತರು, ಮುಖಂಡರು ಸ್ವಇಚ್ಛೆಯಿಂದ ಭಾಗವಹಿಸಲಿದ್ದಾರೆ. ಇದಕ್ಕೂ ಮುನ್ನ ಡಿ.27ರಂದು ಬೆಳಗ್ಗೆ ಸುವರ್ಣಸೌಧದಲ್ಲಿ ಮಹಾತ್ಮಾ ಗಾಂಧೀಜಿ ಅವರ ಪ್ರತಿಮೆ ಅನಾವರಣ ಮಾಡಲಾಗುವುದು. ಮಲ್ಲಿಕಾರ್ಜುನ ಖರ್ಗೆ ಹಾಗೂ ರಾಹುಲ್ ಗಾಂಧಿ ಅವರು ಈ ಪ್ರತಿಮೆ ಅನಾವರಣ ಮಾಡಲಿದ್ದಾರೆ. ಉಭಯ ಸದನಗಳ ಸ್ಪೀಕರ್ ಹಾಗೂ ಸಭಾಪತಿಗಳು, ವಿರೋಧ ಪಕ್ಷಗಳ ನಾಯಕರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಈ ಕಾರ್ಯಕ್ರಮದಲ್ಲಿ ಕೇವಲ ಶಾಸಕರು, ಸಂಸದರು ಹಾಗೂ ಅತಿಥಿಗಳಿಗೆ ಮಾತ್ರ ಅವಕಾಶವಿದ್ದು, ಭದ್ರತೆ ಹಿನ್ನೆಲೆಯಲ್ಲಿ ಸಾರ್ವಜನಿಕರಿಗೆ ಅವಕಾಶವಿಲ್ಲ ಎಂದು ತಿಳಿಸಿದರು.
ಕಾರ್ಯಕಾರಿ ಸಮಿತಿ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಗುವುದೇ ಎಂಬ ಪ್ರಶ್ನೆಗೆ ಉತ್ತರಿಸಿ, ಈ ವಿಚಾರವಾಗಿ ಎಐಸಿಸಿ ತೀರ್ಮಾನ ಮಾಡಲಿದೆ. ಕೆಲವು ಅಜೆಂಡಾಗಳಿವೆ. 1924ರಲ್ಲಿ ಮಹಾತ್ಮಾ ಗಾಂಧೀಜಿ ಅವರು ಕಾಂಗ್ರೆಸ್ ಅಧಿವೇಶನದ ಅಧ್ಯಕ್ಷರಾದಾಗ ಕರ್ನಾಟಕದವರೇ ಆದ ಗಂಗಾಧರ ದೇಶಪಾಂಡೆ ಹಾಗು ಜವಾಹರಲಾಲ್ ನೆಹರೂ ಅವರು ಪ್ರಧಾನ ಕಾರ್ಯದರ್ಶಿಗಳಾಗಿದ್ದರು. ಆ ಅಧಿವೇಶನದಲ್ಲಿ ಹಲವು ತೀರ್ಮಾನಗಳನ್ನು ಮಾಡಲಾಗಿತ್ತು. ಇಂದಿನ ಕಾಲಘಟ್ಟಕ್ಕೆ ಅನುಗುಣವಾಗಿ ಪಕ್ಷ ಅನೇಕ ತೀರ್ಮಾನಗಳನ್ನು ಮಾಡಲಿದೆ ಎಂದು ಮಾಹಿತಿ ನೀಡಿದರು. (kpc)
_______________________________________________________________
ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi
_______________________________________________________________
