

ಪ್ರತಿಷ್ಠೆಯ ವಿಚಾರವಾಗಿರುವ ಬೆಳಗಾವಿ ಲೋಕಸಭಾ ಕ್ಷೇತ್ರದ ಉಪಚುನಾವಣೆಗೆ ಕಾಂಗ್ರೆಸ್ ಪಕ್ಷದಿಂದ ಮೂವರು ಸಂಭಾವ್ಯ ಅಭ್ಯರ್ಥಿಗಳ ಪಟ್ಟಿ ಸಿದ್ಧಗೊಂಡಿದೆ.

ಬೆಂಗಳೂರು: ಪ್ರತಿಷ್ಠೆಯ ವಿಚಾರವಾಗಿರುವ ಬೆಳಗಾವಿ ಲೋಕಸಭಾ ಕ್ಷೇತ್ರದ ಉಪಚುನಾವಣೆಗೆ ಕಾಂಗ್ರೆಸ್ ಪಕ್ಷದಿಂದ ಮೂವರು ಸಂಭಾವ್ಯ ಅಭ್ಯರ್ಥಿಗಳ ಪಟ್ಟಿ ಸಿದ್ಧಗೊಂಡಿದೆ.
ನಿರೀಕ್ಷೆಯಂತೆ ಸತೀಶ್ ಜಾರಕಿಹೊಳಿ, ಪ್ರಕಾಶ್ ಹುಕ್ಕೇರಿ ಮತ್ತು ಲಕ್ಷ್ಮಿ ಹೆಬ್ಬಾಳ್ಕರ್ ಸಹೋದರ ಚನ್ನರಾಜು ಹಟ್ಟಿಹೊಳಿ ಅವರ ಹೆಸರು ಈ ಪಟ್ಟಿಯಲ್ಲಿದೆ. ಮೂಲಗಳ ಪ್ರಕಾರ, ಸತೀಶ್ ಜಾರಕಿಹೊಳಿ ಅವರಿಗೆ ಅಂತಿಮವಾಗಿ ಟಿಕೆಟ್ ಸಿಗುವ ಸಾಧ್ಯತೆ ಇದೆ ಎನ್ನಲಾಗಿದೆ.
ಬಿಜೆಪಿ ಸಂಸದ ಹಾಗೂ ಕೇಂದ್ರ ಸಚಿವರಾಗಿದ್ದ ಸುರೇಶ್ ಅಂಗಡಿ ಅವರ ಅಕಾಲಿಕ ನಿಧನದಿಂದ ಬೆಳಗಾವಿ ಲೋಕಸಭಾ ಕ್ಷೇತ್ರ ಖಾಲಿ ಬಿದ್ದಿದೆ. ಹೀಗಾಗಿ, ಕಾಂಗ್ರೆಸ್ ಭ್ಯರ್ಥಿಗಳನ್ನ ಆಯ್ಕೆ ಮಾಡಲು ಕೆಪಿಸಿಸಿ ಮುಖ್ಯ ಕಚೇರಿಯಲ್ಲಿ ಹಿರಿಯ ನಾಯಕರ ಸಭೆ ನಡೆಯಿತು.
ನಾನು ಬೆಳಗಾವಿ ಲೋಕಸಭೆ ಉಪಚುನಾವಣೆ ಟಿಕೆಟ್ ಆಕಾಂಕ್ಷಿಯಲ್ಲ ಎಂದು ಈ ಮೊದಲು ಸತೀಶ್ ಜಾರಕಿಹೊಳಿ ಹೇಳಿದ್ದರು. ಕೋವಿಡ್ ಮಹಾಮಾರಿಗೆ ಎಂ ನಾರಾಯಣರಾವ್ ಬಲಿಯಾಗುವುದರೊಂದಿಗೆ ತೆರವುಗೊಂಡಿರುವ ಬಸವಕಲ್ಯಾಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೂ ಕಾಂಗ್ರೆಸ್ ಅಭ್ಯರ್ಥಿಗಳ ಆಯ್ಕೆ ಕಸರತ್ತು ನಡೆದಿದೆ. ಕೆಪಿಸಿಸಿ ಇಬ್ಬರು ಅಭ್ಯರ್ಥಿಗಳ ಹೆಸರನ್ನು ಪಟ್ಟಿ ಮಾಡಿದೆ.
ನಾರಾಯಣರಾವ್ ಅವರ ಪತ್ನಿ ಮಲ್ಲಮ್ಮ ಮತ್ತು ವಿಧಾನಪರಿಷತ್ ಸದಸ್ಯ ವಿಜಯ್ ಸಿಂಗ್ ಅವರ ಹೆಸರು ಅಂತಿಮಗೊಂಡಿದ್ದು ಹೈಕಮಾಂಡ್ ಅಂಗಳಕ್ಕೆ ಪಟ್ಟಿ ಕಳುಹಿಸಲು ನಿರ್ಧರಿಸಲಾಗಿದೆ. ಮಾಜಿ ಬೀದರ್ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಬಸವರಾಜ ಬುಲ್ಲಾ ಅವರ ಹೆಸರೂ ರೇಸ್ನಲ್ಲಿತ್ತು.



ಉಪಚುನಾವಣೆಗಳ ಬಗ್ಗೆ ಹಲವು ಸಲಹೆಗಳಿವೆ ಮತ್ತು ಅನೇಕ ಹೆಸರುಗಳ ಬಗ್ಗೆಯೂ ಚರ್ಚಿಸಿದ್ದೇವೆ ನಾವು ಕೇಂದ್ರ ನಾಯಕರಿಗೆ ಹೆಸರುಗಳನ್ನು ಕಳುಹಿಸುತ್ತೇವೆ ಮತ್ತು ಅವರು ಅಂತಿಮ ನಿರ್ಧಾರ ತೆಗೆದುಕೊಳ್ಳುತ್ತಾರೆ ಎಂದು ಸಭೆಯ ಶಿವಕುಮಾರ್ ಸುದ್ದಿಗಾರರಿಗೆ ತಿಳಿಸಿದರು. (kpc)
